ಬೆಂಗಳೂರು: ಮನಕಲುಕುವ ದಾರುಣ ಘಟನೆ ಸಂಭವಿಸಿದ್ದು, ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ಬಳಿಕ, ಆಘಾತದಿಂದ ಮನನೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ನಡೆದಿದೆ.ಮೃತರನ್ನು ಪ್ರತಿಭಾ (29) ಮತ್ತು ಅವರ ಪುತ್ರ ಅಗಸ್ತ್ಯ ಎಂದು ಗುರುತಿಸಲಾಗಿದೆ. ಪ್ರತಿಭಾ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದು, ಮನೆಯಿಂದಲೇ ಕೆಲಸ ಮಾಡುತ್ತಿದ್ದರು.ಗುರುವಾರ ಸಂಜೆ ಟೆರೇಸ್ ಮೇಲೆ ಒಣಗಲು ಹಾಕಿದ್ದ ಬಟ್ಟೆಗಳನ್ನು ತರಲು ಪ್ರತಿಭಾ ಮೇಲಕ್ಕೆ ತೆರಳಿದ ವೇಳೆ, ಮಗು ಮನೆಯಲ್ಲಿ ಆಟವಾಡುತ್ತಾ ಬಚ್ಚಲು ಮನೆಗೆ ಹೋಗಿದೆ. ಅಲ್ಲಿ ನೀರಿನಿಂದ ತುಂಬಿದ್ದ ಬಕೆಟ್‌ನಲ್ಲಿ ಮುಳುಗಿ ಉಸಿರುಗಟ್ಟಿ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.ಬಟ್ಟೆಗಳನ್ನು ತೆಗೆದುಕೊಂಡು ಕೆಳಗೆ ಬಂದ ತಾಯಿ ಮಗುವಿನ ಸ್ಥಿತಿ ಕಂಡು ಬೆಚ್ಚಿಬಿದ್ದಿದ್ದು, ಮಗುವನ್ನು ಉಳಿಸಲು ಸಾಧ್ಯವಾಗದ ನೋವಿನಿಂದ ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾರೆ.ಘಟನಾ ಸ್ಥಳದಲ್ಲಿ ಪತ್ತೆಯಾದ ಡೆತ್‌ನೋಟ್ನಲ್ಲಿ, “ನನ್ನ ಮಗುವಿನ ಸಾವಿಗೆ ನಾನೇ ಕಾರಣ. ಅವನನ್ನು ಉಳಿಸಿಕೊಳ್ಳಲು ನನಗೆ ಸಾಧ್ಯವಾಗಲಿಲ್ಲ. ಹೀಗಾಗಿ ನಾನು ಈ ನಿರ್ಧಾರ ಕೈಗೊಂಡಿದ್ದೇನೆ” ಎಂದು ಬರೆದಿರುವುದು ತಿಳಿದುಬಂದಿದೆ.ಪೊಲೀಸರ ಮಾಹಿತಿ ಪ್ರಕಾರ, ಆತ್ಮಹತ್ಯೆಗೆ ಮುನ್ನ ಪ್ರತಿಭಾ ಅವರು ಮಾತ್ರೆಗಳನ್ನು ಸೇವಿಸಿ, ಕೈ ಕತ್ತರಿಸಿಕೊಂಡು ಸಾವಿಗೆ ಯತ್ನಿಸಿದ್ದರೂ, ಅಂತಿಮವಾಗಿ ಮನೆಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಈ ಘಟನೆ ಕುಟುಂಬಸ್ಥರು ಹಾಗೂ ಸ್ಥಳೀಯರನ್ನು ತೀವ್ರ ದುಃಖಕ್ಕೆ ದೂಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *