ರಿಪ್ಪನ್ ಪೇಟೆ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಪ್ರತೀಕ್ಷಿತವಾಗಿ ಭೇಟಿ ನೀಡಿ ವ್ಯವಸ್ಥೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು.


ಆರಂಭದಲ್ಲಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಆಸ್ಪತ್ರೆಯ ಮೂಲಸೌಕರ್ಯ, ಔಷಧ ಸಂಗ್ರಹ, ವೈದ್ಯಕೀಯ ಸೇವೆಗಳ ಗುಣಮಟ್ಟ ಮತ್ತು ರೋಗಿಗಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳ ಬಗ್ಗೆ ವಿವರವಾಗಿ ಮಾಹಿತಿ ಪಡೆದರು. ವೈದ್ಯರು ಮತ್ತು ಸಿಬ್ಬಂದಿಗಳೊಂದಿಗೆ ಚರ್ಚಿಸಿ, ಅಗತ್ಯ ಔಷಧಿಗಳು ಯಾವಾಗಲೂ ಲಭ್ಯವಾಗುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ರೋಗಿಗಳಿಗೆ ತಕ್ಷಣ ಮತ್ತು ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಯಾವುದೇ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.


ಅನಂತರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಆರೋಗ್ಯ, ಶಿಕ್ಷಣ ಮತ್ತು ದಿನನಿತ್ಯದ ಅಗತ್ಯಗಳ ಕುರಿತು ವಿಚಾರಿಸಿದರು. ಮಕ್ಕಳಿಗೆ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿದುಕೊಂಡರು. ಇದೇ ವೇಳೆ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಹಂಚಿಕೊಂಡರು. ಕೆಲವರು ಐಎಎಸ್ ಅಧಿಕಾರಿ, ಇಂಜಿನಿಯರ್ ಮತ್ತು ಪೊಲೀಸ್ ಅಧಿಕಾರಿಗಳಾಗಬೇಕೆಂಬ ಆಶಯವನ್ನು ವ್ಯಕ್ತಪಡಿಸಿದರು.

ಮಕ್ಕಳಲ್ಲಿ ಕಾಣಿಸಿಕೊಂಡ ಉತ್ಸಾಹ ಮತ್ತು ಗುರಿಯ ಸ್ಪಷ್ಟತೆ ಜಿಲ್ಲಾಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಯಿತು.
ವಿದ್ಯಾರ್ಥಿ ನಿಲಯದ ಭೋಜನಾಲಯ, ಅಡುಗೆಮನೆ ಮತ್ತು ಸಂಗ್ರಹಣಾ ಕೊಠಡಿಗಳನ್ನು ಪರಿಶೀಲಿಸಿದ ಅವರು, ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆಯನ್ನು ಕಡ್ಡಾಯವಾಗಿ ಕಾಪಾಡಿಕೊಳ್ಳಬೇಕು ಎಂದು ಸೂಚಿಸಿದರು. ವಿದ್ಯಾರ್ಥಿಗಳಿಗೆ ಯಾವುದೇ ಕೊರತೆ ಉಂಟಾಗದಂತೆ ನೋಡಿಕೊಳ್ಳುವುದು ವಾರ್ಡನ್‌ಗಳ ಮುಖ್ಯ ಜವಾಬ್ದಾರಿ ಎಂದು ಹೇಳಿದರು.


ಈ ಸಂದರ್ಭದಲ್ಲಿ ತಹಶೀಲ್ದಾರ್ ಭರತ್ ರಾಜ್, ಶಿರಸ್ತೇದಾರ್ ಸುಧೀರ್ ಕುಮಾರ್, ರಾಜಸ್ವ ನಿರೀಕ್ಷಕ ಸೈಯದ್ ಅಪ್ರೋಜ್, ವಿಎ ಮಂಜುನಾಥ್, ಪ್ರವೀಣ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *