
ಬೆಂಗಳೂರು : ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ (ಕೆಎಸ್‌ಎಫ್‌ಐಸಿ) ತನ್ನ ಸಾಮಾಜಿಕ ಬದ್ಧತೆಯನ್ನು ಮತ್ತೊಮ್ಮೆ ಮೆರೆದಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹1.05 ಕೋಟಿ ಮೊತ್ತದ ದೇಣಿಗೆಯನ್ನು ಸಲ್ಲಿಸಿದೆ.
ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರ ನೇತೃತ್ವದಲ್ಲಿ, ನಿಗಮದ ವತಿಯಿಂದ ₹1 ಕೋಟಿ 5 ಲಕ್ಷ ಮೊತ್ತದ ಚೆಕ್ ಅನ್ನು ವಿಧಾನಸೌಧದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಪರವಾಗಿ ಡಿ.ಕೆ. ಶಿವಕುಮಾರ್ ಅವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ. ವಿ. ವೆಂಕಟೇಶ್, ಐಎಫ್‌ಎಸ್, ಸೇರಿದಂತೆ ನಿಗಮದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಕೃತಿ ವಿಕೋಪ, ಪ್ರವಾಹ, ಭೂಕುಸಿತ ಸೇರಿದಂತೆ ವಿವಿಧ ಸಂಕಷ್ಟದ ಸಂದರ್ಭಗಳಲ್ಲಿ ಸಾರ್ವಜನಿಕರ ನೆರವಿಗೆ ಬಳಕೆಯಾಗುವ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಈ ದೇಣಿಗೆ ನೀಡಿರುವುದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಸಾಮಾಜಿಕ ಹೊಣೆಗಾರಿಕೆ ಹಾಗೂ ಜನಪರ ಕಾಳಜಿಯನ್ನು ಪ್ರತಿಬಿಂಬಿಸುವ ಮಹತ್ವದ ಹೆಜ್ಜೆಯಾಗಿದೆ.
ಈ ದೇಣಿಗೆಯ ಮೂಲಕ ಸಂಕಷ್ಟದಲ್ಲಿರುವ ಜನರ ನೆರವಿಗೆ ನಿಗಮವು ತನ್ನ ಕೈಜೋಡಿಸಿದ್ದು, ಸಮಾಜಮುಖಿ ಕಾರ್ಯಗಳಲ್ಲಿ ಸರ್ಕಾರದೊಂದಿಗೆ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸಿದೆ.