
ತೀರ್ಥಹಳ್ಳಿ, ಜು.22: ತಾಲೂಕಿನ ಮಂಡಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ದೊರೆಯುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದು, ವೈದ್ಯರ ಕಾರ್ಯವೈಖರಿ ಕುರಿತು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರ ಆರೋಪದ ಪ್ರಕಾರ, ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ಬರುವ ರೋಗಿಗಳನ್ನು ವೈದ್ಯರು ಸಮರ್ಪಕವಾಗಿ ಪರೀಕ್ಷಿಸುತ್ತಿಲ್ಲ. ಸಾಮಾನ್ಯ ಜ್ವರ, ಕೆಮ್ಮು ಸೇರಿದಂತೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೂ ಸೂಕ್ತ ಚಿಕಿತ್ಸೆ ನೀಡದೆ, ಹೊರಗಿನ ಮೆಡಿಕಲ್ ಅಂಗಡಿಗಳಿಂದ ಔಷಧಿ ಖರೀದಿಸಲು ಚೀಟಿ ಬರೆದು ಕಳುಹಿಸುತ್ತಿದ್ದಾರೆ ಎನ್ನಲಾಗಿದೆ. ಇದರಿಂದ ಬಡ ಹಾಗೂ ಗ್ರಾಮೀಣ ಭಾಗದ ಜನರು ಅನಗತ್ಯ ಆರ್ಥಿಕ ಹೊರೆ ಅನುಭವಿಸುವಂತಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಯ ಕರ್ನಾಟಕ ಸಂಘಟನೆ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ಕುರುವಳ್ಳಿ ನಾಗರಾಜ್, ಮಂಡಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾರ್ಯವೈಖರಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳು ಕೂಡಲೇ ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇತ್ತೀಚೆಗೆ ಆರೋಗ್ಯ ಸಚಿವರು ಕ್ಷೇತ್ರಕ್ಕೆ ಭೇಟಿ ನೀಡಿ ಆರೋಗ್ಯ ಸೇವೆ ಸುಧಾರಿಸುವಂತೆ ಸೂಚನೆ ನೀಡಿದ್ದರೂ, ವೈದ್ಯರ ನಿರ್ಲಕ್ಷ್ಯದ ಕುರಿತು ದೂರುಗಳು ಮುಂದುವರಿಯುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಆರೋಗ್ಯ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಬಡ ಹಾಗೂ ಗ್ರಾಮೀಣ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇಲ್ಲವಾದಲ್ಲಿ ಜಯ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ಮಂಡಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಾಲೂಕು ಅಧ್ಯಕ್ಷ ಕುರುವಳ್ಳಿ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
