
ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಹೊಸನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಹೊಸನಗರ, ಜುಲೈ 22: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿ ಚಾರ್ಜ್ ನಡೆಸಿರುವುದು ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ, ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.
ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೋಳಿ ಅವರ ನೇತೃತ್ವದಲ್ಲಿ ಕೋರ್ಟ್ ಸರ್ಕಲ್ ಬಳಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ವೇಳೆ ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರಹಾಕಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ಜಿ. ಚಂದ್ರಮೋಳಿ ಅವರು, “ನೀಟ್ ಪರೀಕ್ಷೆ ಹಗರಣದಿಂದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ. ಕೇಂದ್ರ ಸರ್ಕಾರ ತಕ್ಷಣ ಸಮಗ್ರ ಮತ್ತು ಪಾರದರ್ಶಕ ತನಿಖೆ ನಡೆಸಬೇಕು. ಪ್ರಜಾಪ್ರಭುತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ಹತ್ತಿಕ್ಕುವ ಕ್ರಮ ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ. ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಬದಲು ಅವರ ಸಮಸ್ಯೆಗೆ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕಿ ಮಂಜು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
