ರಿಪ್ಪನ್ ಪೇಟೆ , ಜುಲೈ 25: ಭಾರಿ ಗಾಳಿ ಹಾಗೂ ಮಳೆಯ ಅಬ್ಬರದ ನಡುವೆ ರಸ್ತೆ ಬದಿಯಲ್ಲಿದ್ದ ಮರವೊಂದು ಉರುಳಿ ಬಿದ್ದ ಪರಿಣಾಮ ಕಾಲೇಜು ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಸಾನಿ ಗ್ರಾಮದಲ್ಲಿ ನಡೆದಿದೆ.

ಗಾಯಾಳುವನ್ನು ಹಿರೆಸಾನಿ ಗ್ರಾಮದ ಶೇಖರಪ್ಪ ಅವರ ಪುತ್ರಿ ನಿಖಿತಾ ಎಂದು ಗುರುತಿಸಲಾಗಿದೆ. ಅವರು ಗರ್ತಿಕೆರೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಶುಕ್ರವಾರ ಸಂಜೆ ತರಗತಿ ಮುಗಿಸಿಕೊಂಡು ಇಬ್ಬರು ಸ್ನೇಹಿತರೊಂದಿಗೆ ಮನೆಗೆ ಮರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ಮಾರ್ಗಮಧ್ಯೆ ಭಾರಿ ಗಾಳಿ ಮತ್ತು ಮಳೆಯ ಪರಿಣಾಮ ವಿದ್ಯುತ್ ತಂತಿಯೊಂದು ರಸ್ತೆಗೆ ಬಿದ್ದಿರುವುದನ್ನು ಗಮನಿಸಿದ ಮೂವರು ವಿದ್ಯಾರ್ಥಿಗಳು ಸುರಕ್ಷತೆಯ ದೃಷ್ಟಿಯಿಂದ ಹಿಂದಕ್ಕೆ ಸರಿಯಲು ಮುಂದಾಗಿದ್ದರು. ಇದೇ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರವೊಂದು ಏಕಾಏಕಿ ಉರುಳಿ ನಿಖಿತಾ ಅವರ ಮೇಲೆ ಬಿದ್ದಿದೆ.

ಅಪಘಾತದ ಪರಿಣಾಮ ನಿಖಿತಾ ಅವರ ಎಡ ಕಾಲಿಗೆ ತೀವ್ರ ಪೆಟ್ಟಾಗಿದ್ದು, ಮೂಳೆ ಮುರಿದಿರುವುದಾಗಿ ತಿಳಿದುಬಂದಿದೆ. ವಿದ್ಯಾರ್ಥಿನಿಯ ಕಿರುಚಾಟ ಕೇಳಿ ಸ್ಥಳೀಯರು ಕೂಡಲೇ ಧಾವಿಸಿ ರಕ್ಷಣೆ ಕಾರ್ಯ ನಡೆಸಿ, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರು.ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಗಾಯದ ಗಂಭೀರತೆಯನ್ನು ಪರಿಶೀಲಿಸಿ ಹೆಚ್ಚಿನ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ತಿಳಿಸಿ, ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲು ಸಲಹೆ ನೀಡಿದರು. ಅದರಂತೆ ವಿದ್ಯಾರ್ಥಿನಿಯನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಘಟನೆಯ ಮಾಹಿತಿ ತಿಳಿದ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ವಿದ್ಯಾರ್ಥಿನಿಯ ಚಿಕಿತ್ಸೆಗೆ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದ್ದಾರೆ. ತಾಲೂಕು ಆಡಳಿತ ಮತ್ತು ಶಿಕ್ಷಣ ಇಲಾಖೆಯ ಮೂಲಕ ಆರ್ಥಿಕ ನೆರವು ದೊರಕುವಂತೆ ಕ್ರಮ ಕೈಗೊಳ್ಳುವುದರ ಜೊತೆಗೆ ವೈಯಕ್ತಿಕವಾಗಿಯೂ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ.