ಹೊಸನಗರ, ಜುಲೈ 27: ನೀಟ್ (NEET) ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗಳನ್ನು ನೆಪವನ್ನಾಗಿ ಮಾಡಿಕೊಂಡು ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಹಾಗೂ ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಸಮಸ್ತ ಹಿಂದೂ ಸಂಘಟನೆಗಳ ವತಿಯಿಂದ ಸೋಮವಾರ ಹೊಸನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ಕೇಸರಿ ಧ್ವಜಗಳನ್ನು ಹಿಡಿದು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಬಳಿಕ ರಾಜ್ಯಪಾಲರಿಗೆ ಸಲ್ಲಿಸುವಂತೆ ಅಧಿಕಾರಿಗಳ ಮೂಲಕ ಮನವಿ ಪತ್ರವನ್ನು ಸಲ್ಲಿಸಿದರು. ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಘಟನೆಯ ಮುಖಂಡರು, ವಿದ್ಯಾರ್ಥಿಗಳ ಹೆಸರಿನಲ್ಲಿ ನಡೆಯುತ್ತಿರುವ ಕೆಲವು ಪ್ರತಿಭಟನೆಗಳ ವೇಳೆ ದೇಶವಿರೋಧಿ ಹೇಳಿಕೆಗಳು ಕೇಳಿಬರುತ್ತಿವೆ ಎಂದು ಆರೋಪಿಸಿದರು. ಹಿಂದೂಗಳ ಆರಾಧ್ಯ ದೈವ ಶ್ರೀರಾಮ ಹಾಗೂ ದೇಶದ ಸೈನಿಕರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮುಖಂಡ ರಮೇಶ್ ಮಾತನಾಡಿ, ಕಳೆದ 10ರಿಂದ 15 ದಿನಗಳಿಂದ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗಳ ಹಿಂದೆ ಸಂಘಟಿತ ಪಿತೂರಿಯಿದೆ ಎಂದು ಆರೋಪಿಸಿದರು. ಸರ್ಕಾರ ಈಗಾಗಲೇ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೆಲ ಅಧಿಕಾರಿಗಳನ್ನು ಅಮಾನತುಗೊಳಿಸಿ ತನಿಖಾ ಸಮಿತಿಯನ್ನು ರಚಿಸಿದ್ದರೂ ಪ್ರತಿಭಟನೆಗಳು ಮುಂದುವರಿಯುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು.

ಬಾಂಗ್ಲಾದೇಶ, ಶ್ರೀಲಂಕಾ ಹಾಗೂ ನೇಪಾಳದಲ್ಲಿ ಸರ್ಕಾರಗಳನ್ನು ಅಸ್ಥಿರಗೊಳಿಸಿದ ರೀತಿಯಲ್ಲೇ ಭಾರತದಲ್ಲೂ ಸರ್ಕಾರವನ್ನು ಉರುಳಿಸಲು ಸಂಚು ರೂಪಿಸಲಾಗಿದೆ ಎಂದು ಅವರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಕೆಲ ಮುಖಂಡರು, ವಿದ್ಯಾರ್ಥಿಗಳ ಪ್ರತಿಭಟನೆಯ ಹಿಂದೆ ‘ಡೀಪ್ ಸ್ಟೇಟ್’, ಜಾರ್ಜ್ ಸೊರೊಸ್ ಸೇರಿದಂತೆ ವಿದೇಶಿ ಶಕ್ತಿಗಳ ಕೈವಾಡವಿದೆ ಎಂದು ಆರೋಪಿಸಿದರು. ಮಾಜಿ ಎಎಪಿ ನಾಯಕರೊಬ್ಬರು ವಿದೇಶಿ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದು, ಭಾರತದಲ್ಲಿ ಅಸ್ಥಿರತೆ ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ ಎಂಬ ಆರೋಪವನ್ನೂ ಮಾಡಿದರು.ಇದೇ ವೇಳೆ

‘ಕಾಕ್ರೋಚ್ ಜನತಾ ಪಾರ್ಟಿ’ ಎಂಬ ಸಂಘಟನೆ ಅಥವಾ ಪಕ್ಷದ ಮೂಲಕ ಮೊಬೈಲ್ ಆಧಾರಿತ ಸದಸ್ಯತ್ವ ಅಭಿಯಾನ ನಡೆಸಲಾಗುತ್ತಿದೆ ಎಂಬ ಆರೋಪವನ್ನೂ ಅವರು ಪ್ರಸ್ತಾಪಿಸಿದರು.

ಬೆಂಗಳೂರು, ರಾಜಸ್ಥಾನ ಹಾಗೂ ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನಿರೀಕ್ಷಿತ ಬೆಂಬಲ ದೊರೆಯದ ಹಿನ್ನೆಲೆಯಲ್ಲಿ, ವ್ಯವಸ್ಥೆಯೊಳಗಿನ ಕೆಲ ಭ್ರಷ್ಟ ಅಧಿಕಾರಿಗಳನ್ನು ಬಳಸಿಕೊಂಡು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಆದರೆ ಈ ಆರೋಪಗಳಿಗೆ ಸಂಬಂಧಿಸಿದ ಯಾವುದೇ ಅಧಿಕೃತ ದಾಖಲೆ ಅಥವಾ ಪುರಾವೆಯನ್ನು ಸಾರ್ವಜನಿಕವಾಗಿ ಮಂಡಿಸಲಿಲ್ಲ.

ವಿದ್ಯಾರ್ಥಿಗಳ ಪ್ರತಿಭಟನೆಗಳಲ್ಲಿ ಕೆಲ ಧಾರ್ಮಿಕ ಮುಖಂಡರು ಭಾಗವಹಿಸುತ್ತಿರುವುದನ್ನು ಪ್ರಶ್ನಿಸಿದ ಪ್ರತಿಭಟನಾಕಾರರು, ಚರ್ಚ್ ಫಾದರ್‌ಗಳು, ಮೌಲಾನಾಗಳು ಹಾಗೂ ‘ಟುಕ್ಡೇ ಗ್ಯಾಂಗ್’ ಎಂದು ಆರೋಪಿಸಿದ ಕೆಲವು ಗುಂಪುಗಳ ಪಾತ್ರದ ಕುರಿತು ಸರ್ಕಾರ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ದೆಹಲಿ ಸೇರಿದಂತೆ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಅವರ ಚಟುವಟಿಕೆಗಳ ಹಿಂದೆಯೂ ಇದೇ ರೀತಿಯ ಶಕ್ತಿಗಳಿವೆ ಎಂದು ಕೆಲ ಮುಖಂಡರು ಆರೋಪಿಸಿದರು. ಆದರೆ ಈ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದೇ ಪುರಾವೆಗಳನ್ನು ಅವರು ಸಾರ್ವಜನಿಕವಾಗಿ ಬಹಿರಂಗಪಡಿಸಲಿಲ್ಲ.

ವಿದ್ಯಾರ್ಥಿಗಳ ಭವಿಷ್ಯವನ್ನು ನೆಪವನ್ನಾಗಿ ಮಾಡಿಕೊಂಡು ದೇಶದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ದೇಶವಿರೋಧಿ ಶಕ್ತಿಗಳನ್ನು ಗುರುತಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸುದೀದ್ರ ಪಂಡಿತ್, ಧನ್ಯಶ್ರೀ ರಮೇಶ್, ಅನೂಪ್ ಅರವಿಂದ್, ಗಣಪತಿ ಬೆಳಗೋಡು, ಪ್ರಶಾಂತ್ ಆಟೋ, ಎಂ.ಎನ್. ಸುಧಾಕರ್, ಕೆ.ವಿ. ವಿನಯ್, ಎನ್.ಆರ್. ದೇವಾನಂದ್, ಶ್ರೀಪತಿ ರಾವ್, ರಾಘವೇಂದ್ರ ಕಲ್ಕೊಪ್ಪ, ಮಂಜುನಾಥ್ ಸಂಜೀವ, ರಾಜು, ಉಮೇಶ್ ಸೇರಿದಂತೆ ಹಿಂದೂ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಪ್ರತಿಭಟನೆಯ ಬಳಿಕ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.