Malnad

Suddi Express

ಮೂರು ತಿಂಗಳ ವೇತನ ಬಾಕಿ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆಗೆ ಕುರುವಳ್ಳಿ ನಾಗರಾಜ್ ಮಧ್ಯಸ್ಥಿಕೆಯಿಂದ ತಾತ್ಕಾಲಿಕ ತೆರೆ

ತೀರ್ಥಹಳ್ಳಿ: ಕಳೆದ ಮೂರು ತಿಂಗಳಿಂದ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ಶ್ರೀ ಜಯಚಾಮರಾಜೇಂದ್ರ ಸರ್ಕಾರಿ ತಾಲೂಕು ಆಸ್ಪತ್ರೆಯ ಡಿ ದರ್ಜೆ ನೌಕರರು ಹಾಗೂ ಹೊರಗುತ್ತಿಗೆ ಮಹಿಳಾ ಸಿಬ್ಬಂದಿ ಕರ್ತವ್ಯ ಸ್ಥಗಿತಗೊಳಿಸಿ ನಡೆಸಿದ ಪ್ರತಿಭಟನೆಗೆ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಕುರುವಳ್ಳಿ ನಾಗರಾಜ್ ಅವರ ಮಧ್ಯಸ್ಥಿಕೆಯಿಂದ ತಾತ್ಕಾಲಿಕ ತೆರೆ ಬಿದ್ದಿದೆ.

ಸೋಮವಾರ ಬೆಳಗ್ಗೆಯಿಂದಲೇ ಆಸ್ಪತ್ರೆಯ ಸಿಬ್ಬಂದಿ ವೇತನ ಪಾವತಿಗೆ ಆಗ್ರಹಿಸಿ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಕಳೆದ ಮೂರು ತಿಂಗಳಿನಿಂದ ದುಡಿದ ವೇತನವನ್ನೇ ಪಡೆಯದೆ ಜೀವನ ನಿರ್ವಹಣೆ ಮಾಡುವುದು ಕಷ್ಟಕರವಾಗಿದೆ. ಹಲವು ಬಾರಿ ಸಂಬಂಧಪಟ್ಟವರ ಗಮನಕ್ಕೆ ತಂದರೂ ಸಮಸ್ಯೆಗೆ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಕರ್ತವ್ಯ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಬೇಕಾಯಿತು ಎಂದು ಸಿಬ್ಬಂದಿ ತಮ್ಮ ಅಳಲನ್ನು ತೋಡಿಕೊಂಡರು.

ಸಿಬ್ಬಂದಿ ಕೆಲಸ ಸ್ಥಗಿತಗೊಳಿಸಿದ್ದರಿಂದ ಆಸ್ಪತ್ರೆಯ ಒಳಾಂಗಣ ಸ್ವಚ್ಛತೆ, ಆವರಣದ ನಿರ್ವಹಣೆ ಸೇರಿದಂತೆ ದಿನನಿತ್ಯದ ಹಲವು ಕಾರ್ಯಗಳಿಗೆ ಅಡಚಣೆ ಉಂಟಾಯಿತು. ಇದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಯಿತು.

ವಿಷಯ ತಿಳಿಯುತ್ತಿದ್ದಂತೆ ಮಧ್ಯಾಹ್ನ ಆಸ್ಪತ್ರೆಗೆ ಆಗಮಿಸಿದ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಕುರುವಳ್ಳಿ ನಾಗರಾಜ್ ಅವರು ಪ್ರತಿಭಟನಾನಿರತ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಸರ್ಕಾರದಿಂದ ಸಿಬ್ಬಂದಿಯ ವೇತನಕ್ಕಾಗಿ ಅಗತ್ಯ ಹಣ ಬಿಡುಗಡೆಯಾಗಿದ್ದರೂ, ಗುತ್ತಿಗೆದಾರರ ಕಡೆಯ ಸಮಸ್ಯೆ ಹಾಗೂ ನಿರ್ವಹಣಾ ಲೋಪದಿಂದಾಗಿ ಮೂರು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂಬ ವಿಚಾರವನ್ನು ಸಿಬ್ಬಂದಿಯ ಗಮನಕ್ಕೆ ತಂದರು.

ಸರ್ಕಾರದಿಂದ ಹಣ ಬಿಡುಗಡೆಯಾದ ನಂತರವೂ ದುಡಿಯುವ ನೌಕರರಿಗೆ ವೇತನ ತಲುಪದಿರುವುದು ಗಂಭೀರ ವಿಚಾರವಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಪೊಲೀಸ್ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಸಿಬ್ಬಂದಿಗೆ ಬರಬೇಕಿರುವ ಬಾಕಿ ವೇತನ ಕೊಡಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು.

ಇನ್ನು ಮುಂದೆ ಹೊರಗುತ್ತಿಗೆ ಸಿಬ್ಬಂದಿಗೆ ಪ್ರತಿ ತಿಂಗಳು ನಿಗದಿತ ಸಮಯಕ್ಕೆ ವೇತನ ಪಾವತಿಯಾಗುವಂತೆ ಜವಾಬ್ದಾರಿ ವಹಿಸಿಕೊಳ್ಳುವುದಾಗಿ ತಿಳಿಸಿದ ನಾಗರಾಜ್, ರೋಗಿಗಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ ಮರಳುವಂತೆ ಮನವಿ ಮಾಡಿದರು. ಅವರ ಭರವಸೆ ಹಾಗೂ ಮನವಿಗೆ ಸ್ಪಂದಿಸಿದ ಸಿಬ್ಬಂದಿ ಪ್ರತಿಭಟನೆಯನ್ನು ಹಿಂಪಡೆದು ಮತ್ತೆ ಕರ್ತವ್ಯಕ್ಕೆ ಹಾಜರಾದರು.

ಇದೇ ಸಂದರ್ಭದಲ್ಲಿ ಸಿಬ್ಬಂದಿಯ ನ್ಯಾಯಯುತ ಬೇಡಿಕೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥ್ ಗೌಡ ಅವರನ್ನು ಕರೆಸಿ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸುವುದಾಗಿ ಕುರುವಳ್ಳಿ ನಾಗರಾಜ್ ತಿಳಿಸಿದರು.

ಅಲ್ಲದೆ, ಸಮಸ್ಯೆಯನ್ನು ಜಿಲ್ಲಾಧಿಕಾರಿಗಳು ಹಾಗೂ ರಾಜ್ಯದ ಆರೋಗ್ಯ ಸಚಿವರ ಗಮನಕ್ಕೆ ತಂದು ಬಾಕಿ ವೇತನ ಪಾವತಿ ಸೇರಿದಂತೆ ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರಕಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರುವುದಾಗಿ ಭರವಸೆ ನೀಡಿದರು.

ನಂತರ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಅರವಿಂದ್ ಅವರಿಗೆ ಸಿಬ್ಬಂದಿ ತಮ್ಮ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು. ಪ್ರವಾಸದಲ್ಲಿರುವ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷರೂ ಆಗಿರುವ ಶಾಸಕ ಆರಗ ಜ್ಞಾನೇಂದ್ರ ಅವರು ಮರಳಿದ ಬಳಿಕ ವಿಶೇಷ ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಸಿ ಸಿಬ್ಬಂದಿಯ ಸಮಸ್ಯೆಗಳ ಕುರಿತು ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ತಿಳಿಸಲಾಯಿತು.

ವೈದ್ಯಾಧಿಕಾರಿ ಡಾ. ಅರವಿಂದ್ ಅವರ ಮೂಲಕ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸಲ್ಲಿಸುವ ಮೂಲಕ ಮುಂದಿನ ಹಂತದ ಮನವಿ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಲಾಯಿತು.

ಈ ಸಂದರ್ಭದಲ್ಲಿ ಬೆಳಗ್ಗೆಯಿಂದಲೇ ಸಿಬ್ಬಂದಿಯ ಸಮಸ್ಯೆಗಳ ಪರಿಹಾರಕ್ಕೆ ಸಹಕಾರ ನೀಡಿದ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶ್ರೇಯಸ್ ಹಾಗೂ ವಾಸುದೇವ ಕಾಮತ್ ಉಪಸ್ಥಿತರಿದ್ದು ಸಹಕರಿಸಿದರು.

ಒಟ್ಟಾರೆಯಾಗಿ,

Leave a Reply

Your email address will not be published. Required fields are marked *